
ಹಾಸನ ಜಿಲ್ಲೆಯಲ್ಲಿ ಕಾಡಾನೆ ದಾಳಿ ಆತಂಕ ಸೃಷ್ಟಿಸಿದೆ. ಬೇಲೂರು ತಾಲೂಕಿನ ಚೀಕನಹಳ್ಳಿ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಹಳ್ಳಿ ಗ್ರಾಮದ ಗಡಿ ಭಾಗದಲ್ಲಿ ಮೂವರು ಇಟಿಎಫ್ ಸಿಬ್ಬಂದಿ ಮೇಲೆ ಕಾಡಾನೆ ದಾಳಿ ನಡೆಸಿದೆ.
ಗ್ರಾಮದ ಸಮೀಪದ ಹಾಸ್ಟೆಲ್ ಹಿಂಭಾಗದಲ್ಲಿ ನಡೆದ ಈ ಘಟನೆಯಲ್ಲಿ ಗಾರ್ಡ್ ರಮೇಶ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನಿಬ್ಬರು ಸಿಬ್ಬಂದಿಗಳಾದ ವಿಶ್ವ ಹಾಗೂ ಜೀವನ್ ಕೂಡ ಗಾಯಗೊಂಡಿದ್ದಾರೆ.
ಕಾಡಾನೆಗಳ ಚಲನವಲನವನ್ನು ಗಮನಿಸಲು ತೆರಳಿದ್ದ ವೇಳೆ ಏಕಾಏಕಿ ದಾಳಿ ನಡೆಸಿದ ಕಾಡಾನೆ ಸಿಬ್ಬಂದಿಯನ್ನು ಗಾಬರಿಗೊಳಿಸಿದೆ. ಗಾಯಾಳುಗಳನ್ನು ತಕ್ಷಣ ಹಾಸನ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನೆ ಬಳಿಕ ಅರಣ್ಯ ಇಲಾಖೆ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದ್ದಾರೆ. ಈ ಭಾಗದಲ್ಲಿ ಕಾಡಾನೆಗಳ ಸಂಚಾರ ಹೆಚ್ಚಾಗಿರುವುದರಿಂದ ಗ್ರಾಮಸ್ಥರಲ್ಲಿ ಭೀತಿ ಹೆಚ್ಚಾಗಿದೆ.

