
ಕೋಲ್ಕತ್ತಾ: ವಿಧಾನಸಭಾ ಚುನಾವಣೆಯ ಹೊತ್ತಿನಲ್ಲಿ ರಾಜಕೀಯ ವಾಕ್ಸಮರ ತಾರಕಕ್ಕೇರಿದೆ. ಟಿಎಂಸಿ ಹಿರಿಯ ನಾಯಕ ಕುನಾಲ್ ಘೋಷ್ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ರಾಹುಲ್ ಗಾಂಧಿ ಪರೋಕ್ಷವಾಗಿ ಬಿಜೆಪಿಗೆ ಸಹಾಯ ಮಾಡುತ್ತಿದ್ದಾರೆ ಎಂದು ಆರೋಪಿಸಿರುವ ಘೋಷ್, ಮಹಾರಾಷ್ಟ್ರ, ದೆಹಲಿ, ಹರಿಯಾಣ ಮತ್ತು ಬಿಹಾರ ರಾಜ್ಯಗಳಲ್ಲಿ ಬಿಜೆಪಿ ಗೆಲುವು ತಡೆಯುವಲ್ಲಿ ಅವರು ವಿಫಲರಾದರು ಎಂದು ಟೀಕಿಸಿದರು.
ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಬಲವಾಗಿರುವ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವುದು ಮತ ವಿಭಜನೆಗೆ ಕಾರಣವಾಗುತ್ತಿದೆ. ಇದರಿಂದ ಬಿಜೆಪಿ ಲಾಭ ಪಡೆಯುತ್ತಿದೆ ಎಂದು ಹೇಳಿದರು.
ಇದೇ ವೇಳೆ, ಬಿಜೆಪಿ ನಾಯಕರು ಬಳಸುವ ‘ಪಪ್ಪು’ ಪದವನ್ನು ಕೂಡ ಘೋಷ್ ಸಮರ್ಥಿಸಿಕೊಂಡಿದ್ದು, ರಾಹುಲ್ ಅವರ ರಾಜಕೀಯ ವೈಫಲ್ಯಗಳನ್ನು ಗಮನಿಸಿದರೆ ಆ ಪದ ಸೂಕ್ತವಾಗಿದೆ ಎಂದು ವ್ಯಂಗ್ಯವಾಡಿದರು.
ಈ ಬೆಳವಣಿಗೆ ಕಾಂಗ್ರೆಸ್ ಮತ್ತು ಟಿಎಂಸಿ ನಡುವಿನ ಘರ್ಷಣೆಯನ್ನು ಮತ್ತಷ್ಟು ಗಂಭೀರಗೊಳಿಸಿದ್ದು, ಇಂಡಿಯಾ ಮೈತ್ರಿಕೂಟದ ಒಗ್ಗಟ್ಟಿನ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ.

