
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟ ದರ್ಶನ್, ಇದೀಗ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಜಾಮೀನು ಅರ್ಜಿಯಲ್ಲಿ ಜೈಲಿನೊಳಗಿನ ಸಂಕಷ್ಟಗಳನ್ನು ಬಿಚ್ಚಿಟ್ಟಿದ್ದಾರೆ.
ಜೈಲಿನಲ್ಲಿ ತನ್ನನ್ನು ಅಮಾನವೀಯವಾಗಿ ನಡೆಸಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿರುವ ದರ್ಶನ್, ನಿಯಮಗಳನ್ನು ಮೀರಿ ಕ್ವಾರಂಟೈನ್ ಸೆಲ್‌ನಲ್ಲಿ ಇರಿಸಲಾಗುತ್ತಿದೆ ಎಂದು ದೂರಿದ್ದಾರೆ. ಸಹಕೈದಿಗಳಿಂದ ಬೆದರಿಕೆ, ನಿಂದನೆ ಮತ್ತು ಮೂದಲಿಕೆ ಎದುರಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಕುಟುಂಬಸ್ಥರ ಭೇಟಿಗೆ ಸಮಾನ ಅವಕಾಶ ಸಿಗುತ್ತಿಲ್ಲ. ಹೊರಗಿನಿಂದ ಆಹಾರ, ಬಟ್ಟೆ ಹಾಗೂ ಹಾಸಿಗೆ ಪಡೆಯಲು ಅವಕಾಶ ನಿರಾಕರಿಸಲಾಗಿದೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ. ಬೆನ್ನು ನೋವಿನ ಸಮಸ್ಯೆ ಇದ್ದರೂ ಸಮರ್ಪಕ ಚಿಕಿತ್ಸೆ ಸಿಗುತ್ತಿಲ್ಲ ಎಂದು ದರ್ಶನ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಜೈಲುವಾಸದಿಂದ ತಮ್ಮ ವೃತ್ತಿಜೀವನ ಸಂಪೂರ್ಣ ಹಾಳಾಗುವ ಭೀತಿ ಎದುರಾಗಿದೆ ಎಂದು ಅವರು ಮನವಿ ಮಾಡಿದ್ದಾರೆ. ಹಲವು ದೊಡ್ಡ ನಿರ್ಮಾಣ ಸಂಸ್ಥೆಗಳ ಸಿನಿಮಾಗಳಿಗೆ ಸಹಿ ಮಾಡಿದ್ದು, ನಿರ್ಮಾಪಕರು ಕೋಟಿ ಕೋಟಿ ಹಣ ಹೂಡಿಕೆ ಮಾಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಲಾಗಿದೆ.
ಪ್ರಕರಣದಲ್ಲಿ 262 ಸಾಕ್ಷಿಗಳ ವಿಚಾರಣೆ ನಡೆಯಬೇಕಿದ್ದು, ಕಳೆದ 8 ತಿಂಗಳಲ್ಲಿ ಕೇವಲ 10 ಸಾಕ್ಷಿಗಳ ವಿಚಾರಣೆ ಮಾತ್ರ ನಡೆದಿದೆ ಎಂದು ದರ್ಶನ್ ಪರ ವಕೀಲರು ಹೇಳಿದ್ದಾರೆ. ಈ ಹಿನ್ನೆಲೆ ಜಾಮೀನು ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಲಾಗಿದೆ.

