
ಬೆಂಗಳೂರು: ಕ್ಷುಲ್ಲಕ ವಿಚಾರವಾಗಿ ಆರಂಭವಾದ ಜಗಳ ಕೊಲೆಯಲ್ಲಿ ಅಂತ್ಯವಾದ ಘಟನೆ ಬೆಂಗಳೂರಿನ ಪಾದರಾಯನಪುರದಲ್ಲಿ ನಡೆದಿದೆ. ಆಟೋ ಸೀಟ್ ವಿಚಾರಕ್ಕೆ ಇಬ್ಬರ ನಡುವೆ ನಡೆದ ಗಲಾಟೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಆಟೋ ಚಾಲಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೃತನನ್ನು 26 ವರ್ಷದ ಮುಬಾರಕ್ ಎಂದು ಗುರುತಿಸಲಾಗಿದ್ದು, ಆರೋಪಿಯನ್ನು ತಬ್ರೇಜ್ (46) ಎಂದು ಪೊಲೀಸರು ತಿಳಿಸಿದ್ದಾರೆ. ಮೇ 1ರಂದು ಮುಬಾರಕ್ ತನ್ನ ಆಟೋ ಸೀಟ್ ತೆಗೆದುಕೊಂಡಿದ್ದಾನೆ ಎಂದು ತಬ್ರೇಜ್ ಮೇಲೆ ಆರೋಪಿಸಿ ಜಗಳ ಆರಂಭಿಸಿದ್ದ ಎನ್ನಲಾಗಿದೆ.
ಬೆಳಗ್ಗೆ ಸುಮಾರು 10 ಗಂಟೆ ವೇಳೆಗೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು ಪರಸ್ಪರ ಹಲ್ಲೆ ಮಾಡಿಕೊಂಡಿದ್ದರು. ಸ್ಥಳೀಯರು ಮಧ್ಯಪ್ರವೇಶಿಸಿ ಇಬ್ಬರನ್ನೂ ಸಮಾಧಾನಪಡಿಸಿದ್ದರು. ಆದರೆ ಮಧ್ಯಾಹ್ನ ಮತ್ತೆ ಇಬ್ಬರ ನಡುವೆ ಗಲಾಟೆ ಶುರುವಾಗಿದ್ದು, ಈ ವೇಳೆ ತಬ್ರೇಜ್ ಮರದ ತುಂಡಿನಿಂದ ಮುಬಾರಕ್ ಮೇಲೆ ಹಲ್ಲೆ ನಡೆಸಿದ್ದಾನೆ.
ತಲೆ ಭಾಗಕ್ಕೆ ಗಂಭೀರ ಗಾಯಗೊಂಡ ಮುಬಾರಕ್ ಸ್ಥಳದಲ್ಲೇ ಕುಸಿದು ಬಿದ್ದಿದ್ದಾನೆ. ತಕ್ಷಣ ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರೂ, ಗಂಭೀರ ಸ್ಥಿತಿಯಲ್ಲಿದ್ದ ಆತ ಕೋಮಾಗೆ ಜಾರಿದ್ದ. ಬಳಿಕ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ.
ಮೃತ ಮುಬಾರಕ್ಗೆ ಒಂದು ವರ್ಷದ ಹಿಂದೆ ಮದುವೆಯಾಗಿದ್ದು, ಪತ್ನಿಯೊಂದಿಗೆ ಪ್ರತ್ಯೇಕವಾಗಿ ವಾಸವಾಗಿದ್ದ ಎಂದು ತಿಳಿದುಬಂದಿದೆ.
ಈ ಸಂಬಂಧ ಜಗಜೀವನರಾಮನಗರ ಪೊಲೀಸರು ಮೊದಲು ಕೊಲೆ ಯತ್ನ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದರು. ಇದೀಗ ಮುಬಾರಕ್ ಸಾವಿನ ಹಿನ್ನೆಲೆ ಪ್ರಕರಣವನ್ನು ಕೊಲೆ ಪ್ರಕರಣವಾಗಿ ಪರಿವರ್ತಿಸಿ ಮುಂದಿನ ತನಿಖೆ ನಡೆಸುತ್ತಿದ್ದಾರೆ.
ಕ್ಷುಲ್ಲಕ ಕಾರಣಕ್ಕೆ ಆರಂಭವಾದ ಜಗಳ ಯುವಕನ ಸಾವಿನಲ್ಲಿ ಅಂತ್ಯವಾಗಿರುವುದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ.

