ಗದಗಕ್ಕೆ ಹೋಗುತ್ತಿದ್ದ ಪಲ್ಲಕ್ಕಿ ಬಸ್‌ಗೆ ಬೆಂಕಿ – ಚಾಲಕನ ಸಮಯಪ್ರಜ್ಞೆಯಿಂದ 17 ಜನ ಪಾರು

ಹಾವೇರಿ: ಬೆಂಗಳೂರಿನಿಂದ ಗದಗ ನಗರಕ್ಕೆ ತೆರಳುತ್ತಿದ್ದ ಪಲ್ಲಕ್ಕಿ ಬಸ್‌ಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾದ ಘಟನೆ ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲ್ಲೂಕಿನ ದೇವರಗುಡ್ಡ ಗ್ರಾಮದ ಬಳಿ ನಡೆದಿದೆ.

KA-57-F6680 ಸಂಖ್ಯೆಯ ಪಲ್ಲಕ್ಕಿ ಬಸ್‌ನಲ್ಲಿ ಸುಮಾರು 17ಕ್ಕೂ ಹೆಚ್ಚು ಪ್ರಯಾಣಿಕರು ಗದಗ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಬಸ್‌ನಲ್ಲಿ ಏಕಾಏಕಿ ಹೊಗೆ ಕಾಣಿಸಿಕೊಂಡಿದ್ದು, ಕೆಲವೇ ಕ್ಷಣಗಳಲ್ಲಿ ಬೆಂಕಿ ವ್ಯಾಪಿಸಿದೆ ಎನ್ನಲಾಗಿದೆ.

ಬ್ರೇಕ್ ಲೈನ್ ದೋಷದಿಂದ ಈ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಚಾಲಕ ಪಕ್ಕೀರಪ್ಪ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿದ್ದಾರೆ. ಪರಿಣಾಮ ದೊಡ್ಡ ದುರಂತ ತಪ್ಪಿದೆ.

ಬಸ್ ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದರು.

ಈ ಕುರಿತು ರಾಣೇಬೆನ್ನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Leave a Reply

Your email address will not be published. Required fields are marked *