ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ತಾರಕಕ್ಕೇರಿತು: ಇಂದು ಕೋಲ್ಕತ್ತಾಗೆ ಅಮಿತ್ ಶಾ ಭೇಟಿ

ಪಶ್ಚಿಮ ಬಂಗಾಳದಲ್ಲಿ ಚುನಾವಣೋತ್ತರ ಹಿಂಸಾಚಾರ ತೀವ್ರ ಸ್ವರೂಪ ಪಡೆದಿದೆ. ಬಿಜೆಪಿ ನಾಯಕ ಸುವೇಂದು ಅಧಿಕಾರಿ ಆಪ್ತ ಸಹಾಯಕ ಚಂದ್ರನಾಥ್ ರಾತ್ ಹತ್ಯೆಯಾದ ಬೆನ್ನಲ್ಲೇ ಮತ್ತೊಬ್ಬ ಬಿಜೆಪಿ ನಾಯಕ ಮನೋಜ್ ಖಾನ್ ಮೇಲೆ ಕಚ್ಚಾ ಬಾಂಬ್ ದಾಳಿ ಯತ್ನ ನಡೆದಿರುವುದು ರಾಜ್ಯ ರಾಜಕೀಯದಲ್ಲಿ ಆತಂಕ ಸೃಷ್ಟಿಸಿದೆ.

ಹೌರಾದ ಶಿಬ್‌ಪುರ ಪ್ರದೇಶದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ದುಷ್ಕರ್ಮಿಗಳು ಅಂಗಡಿಗಳನ್ನ ಧ್ವಂಸಗೊಳಿಸಲು ಯತ್ನಿಸಿದ್ದಾರೆ. ಘಟನೆಯಲ್ಲಿ ಹಲವರು ಗಾಯಗೊಂಡಿದ್ದಾರೆ. ಬಿಜೆಪಿ ನಾಯಕ ಮನೋಜ್ ಖಾನ್ ಅದೃಷ್ಟವಶಾತ್ ಪಾರಾಗಿದ್ದಾರೆ.

ಇದನ್ನ ರಾಜಕೀಯ ಪ್ರತೀಕಾರ ಎಂದು ಆರೋಪಿಸಿರುವ ಬಿಜೆಪಿ, ಟಿಎಂಸಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದೇ ವೇಳೆ ಚಂದ್ರನಾಥ್ ರಾತ್ ಹತ್ಯೆ ಪ್ರಕರಣದ ತನಿಖೆಗೆ ಹಲವು ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಉತ್ತರ 24 ಪರಗಣ ಸೇರಿದಂತೆ ಹಲವು ಪ್ರದೇಶಗಳಲ್ಲಿ ಭದ್ರತೆ ಬಿಗಿಗೊಳಿಸಲಾಗಿದೆ.

ರಾಜಕೀಯ ಬೆಳವಣಿಗೆಯ ಮಧ್ಯೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ಕೋಲ್ಕತ್ತಾಗೆ ಭೇಟಿ ನೀಡಲಿದ್ದು, ಬಿಜೆಪಿ ಶಾಸಕಾಂಗ ಪಕ್ಷದ ಸಭೆ ಭಾರೀ ಕುತೂಹಲ ಕೆರಳಿಸಿದೆ. ಬಂಗಾಳದ ನೂತನ ಮುಖ್ಯಮಂತ್ರಿ ಆಯ್ಕೆ ಬಗ್ಗೆ ಇಂದು ಮಹತ್ವದ ತೀರ್ಮಾನ ಹೊರಬೀಳುವ ಸಾಧ್ಯತೆ ಇದೆ.

ಸಿಎಂ ರೇಸ್‌ನಲ್ಲಿ ಸುವೇಂದು ಅಧಿಕಾರಿ ಹಾಗೂ ದಿಲೀಪ್ ಘೋಷ್ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದ್ದು, ಅಚ್ಚರಿಯ ಅಭ್ಯರ್ಥಿ ಆಯ್ಕೆ ಸಾಧ್ಯತೆಯೂ ಚರ್ಚೆಯಲ್ಲಿದೆ. ಎಲ್ಲವೂ ಯೋಜನೆಯಂತೆ ನಡೆದರೆ ನಾಳೆ ಹೊಸ ಮುಖ್ಯಮಂತ್ರಿ ಪದಗ್ರಹಣ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *