
ದಾವಣಗೆರೆಯಲ್ಲಿ ಎರಡು ಭೀಕರ ರಸ್ತೆ ಅಪಘಾತಗಳು ಸಂಭವಿಸಿದ್ದು, ಮೂವರು ಸಾವನ್ನಪ್ಪಿ ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ.
ಚನ್ನಗಿರಿ ತಾಲೂಕಿನ ಮರಬನಹಳ್ಳಿ ಗ್ರಾಮದಲ್ಲಿ ಸಾರಿಗೆ ಬಸ್‌ನ ಆ್ಯಕ್ಸಲ್ ತುಂಡಾದ ಪರಿಣಾಮ ಬಸ್ ಪಲ್ಟಿಯಾಗಿದೆ. ಈ ದುರ್ಘಟನೆಯಲ್ಲಿ ದರ್ಶನ್ (21) ಎಂಬ ವಿದ್ಯಾರ್ಥಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳಲ್ಲಿ 20ಕ್ಕೂ ಹೆಚ್ಚು ಜನರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣ ದಾವಣಗೆರೆ ಜಿಲ್ಲಾ ಆಸ್ಪತ್ರೆ ಹಾಗೂ ಬಸವಾಪಟ್ಟಣ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಸವಾಪಟ್ಟಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
ಇದೇ ವೇಳೆ ದಾವಣಗೆರೆ ನಗರದ ಶಾಮನೂರು ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಎರಡು ಕಾರುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಗೌತಮ್ (29) ಮತ್ತು ಮನೋಜ್ (29) ಎಂಬ ಇಬ್ಬರು ಯುವಕರು ಸಾವನ್ನಪ್ಪಿದ್ದಾರೆ.
ಮದುವೆ ಕಾರ್ಯಕ್ರಮದಿಂದ ವಾಪಸ್ ಆಗುತ್ತಿದ್ದ ವೇಳೆ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ದುರಂತ ಸಂಭವಿಸಿದೆ ಎನ್ನಲಾಗಿದೆ. ಅಪಘಾತದ ತೀವ್ರತೆಗೆ ಎರಡು ಕಾರುಗಳು ಸಂಪೂರ್ಣ ಜಖಂಗೊಂಡಿವೆ.
ಸ್ಥಳಕ್ಕೆ ದಾವಣಗೆರೆ ದಕ್ಷಿಣ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

