ತಾಯಿಯ ಚಿಕಿತ್ಸೆಗೆ ಬಂದಿದ್ದ ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಸರ್ಕಾರಿ ನೌಕರ ಅರೆಸ್ಟ್

ವಿಜಯನಗರ ಜಿಲ್ಲೆಯ ಹೊಸಪೇಟೆಯ ಸರ್ಕಾರಿ ಆಸ್ಪತ್ರೆಯಲ್ಲಿ ಅಪ್ರಾಪ್ತ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಭಾರೀ ಆಕ್ರೋಶಕ್ಕೆ ಕಾರಣವಾಗಿದೆ. ತಾಯಿಯ ಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದ ಬಾಲಕಿಯನ್ನು ಪುಸಲಾಯಿಸಿ ಡಿ-ಗ್ರೂಪ್ ನೌಕರನೊಬ್ಬ ಅತ್ಯಾಚಾರ ಎಸಗಿರುವ ಆರೋಪ ಕೇಳಿಬಂದಿದೆ.

ಆರೋಪಿಯನ್ನು ಅಜಯ್ ಮದಕರಿ (37) ಎಂದು ಗುರುತಿಸಲಾಗಿದ್ದು, ಆತ ಸರ್ಕಾರಿ ಆಸ್ಪತ್ರೆಯಲ್ಲಿ ಡಿ-ಗ್ರೂಪ್ ನೌಕರನಾಗಿ ಕೆಲಸ ಮಾಡುತ್ತಿದ್ದಾನೆ. ಬಾಲಕಿಯನ್ನು ತನ್ನ ಕ್ವಾಟ್ರಸ್‌ಗೆ ಕರೆದೊಯ್ದು ಮತ್ತು ಬರುವ ದ್ರವ್ಯ ನೀಡಿ ದುಷ್ಕೃತ್ಯ ಎಸಗಿದ್ದಾನೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ಬಾಲಕಿಯ ತಾಯಿ ಹೊಸಪೇಟೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತಕ್ಷಣವೇ ಆರೋಪಿಯನ್ನು ಬಂಧಿಸಿದ್ದು, ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಘಟನೆ ಸಂಬಂಧ ಪೊಲೀಸರು ಹೆಚ್ಚಿನ ತನಿಖೆ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *