
ಮಂಗಳೂರಿನಲ್ಲಿ ಭಾರೀ ಡ್ರಗ್ಸ್ ಜಾಲವನ್ನು ಪೊಲೀಸರು ಭೇದಿಸಿದ್ದಾರೆ.
ಮುಲ್ಕಿಯಲ್ಲಿ 35 ಲಕ್ಷ ರೂಪಾಯಿ ಮೌಲ್ಯದ ಹೈಡ್ರೋವಿಡ್ ಗಾಂಜಾ ಸಾಗಿಸುತ್ತಿದ್ದ ಕಾಲೇಜು ವಿದ್ಯಾರ್ಥಿನಿಯನ್ನು ಬಂಧಿಸಲಾಗಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಸುಹಾನ ಎಂಬ 21 ವರ್ಷದ ವಿದ್ಯಾರ್ಥಿನಿ ಕುಂದಾಪುರದ ಪ್ರತಿಷ್ಠಿತ ಕಾಲೇಜಿನಲ್ಲಿ BCA ಅಂತಿಮ ವರ್ಷದ ವ್ಯಾಸಂಗ ಮಾಡುತ್ತಿದ್ದಳು.
ಚೆನ್ನೈನಿಂದ ಮಂಗಳೂರಿಗೆ ಮಾದಕ ವಸ್ತು ತಂದು ಕಾಲೇಜು ವಿದ್ಯಾರ್ಥಿಗಳು ಮತ್ತು ಶ್ರೀಮಂತ ಗ್ರಾಹಕರಿಗೆ ಮಾರಾಟ ಮಾಡಲು ಸಂಚು ರೂಪಿಸಿದ್ದಳು ಎಂಬ ಆರೋಪ ಕೇಳಿಬಂದಿದೆ.
ಮುಲ್ಕಿ ರೈಲ್ವೇ ಸ್ಟೇಷನ್ ರಸ್ತೆಯಲ್ಲಿ ಡ್ರಗ್ಸ್ ಮಾರಾಟಕ್ಕೆ ಯತ್ನಿಸುತ್ತಿದ್ದ ವೇಳೆ ಪಣಂಬೂರು ಎಸಿಪಿ ತಂಡ ಮತ್ತು ಮುಲ್ಕಿ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಯಿಂದ ಸುಮಾರು 1 ಕೆಜಿ 42 ಗ್ರಾಂ ಹೈಡ್ರೋವಿಡ್ ಗಾಂಜಾವನ್ನು ವಶಪಡಿಸಿಕೊಳ್ಳಲಾಗಿದೆ.
ಇದರ ಮೌಲ್ಯ ಸುಮಾರು 35 ಲಕ್ಷ ರೂಪಾಯಿ ಎಂದು ಅಂದಾಜಿಸಲಾಗಿದೆ.
ಮೊಬೈಲ್ ಫೋನ್ ಸೇರಿದಂತೆ ಹಲವು ದಾಖಲೆಗಳನ್ನು ಪೊಲೀಸರು ಜಪ್ತಿ ಮಾಡಿದ್ದಾರೆ.
ಬಂಧಿತ ವಿದ್ಯಾರ್ಥಿನಿಯ ವಿರುದ್ಧ ಈಗಾಗಲೇ ಮಂಗಳೂರು ಕಾವೂರು ಠಾಣೆ ಮತ್ತು ಬೆಂಗಳೂರು ವಿಮಾನ ನಿಲ್ದಾಣ ಕಸ್ಟಮ್ಸ್ ವಿಭಾಗದಲ್ಲೂ ಪ್ರಕರಣಗಳಿರುವುದು ತನಿಖೆಯಲ್ಲಿ ಬೆಳಕಿಗೆ ಬಂದಿದೆ.
ಪ್ರಸ್ತುತ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಡ್ರಗ್ಸ್ ಜಾಲದ ಹಿಂದೆ ಇರುವ ದೊಡ್ಡ ತಲೆಗಳಿಗಾಗಿ ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

