
ಆನೇಕಲ್: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್ ತಾಲೂಕಿನ ಲಕ್ಷ್ಮಿ ಸಾಗರ ಗ್ರಾಮದಲ್ಲಿ ತಾಯಿ ಮತ್ತು ಮಗಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿದೆ.
ಮೃತರನ್ನು ಲಾವಣ್ಯ (ತಾಯಿ) ಹಾಗೂ ಅವರ 8 ವರ್ಷದ ಮಗಳು ಎಂದು ಗುರುತಿಸಲಾಗಿದೆ. ಇಬ್ಬರ ಶವಗಳು ಗ್ರಾಮದ ಕೃಷಿ ಹೊಂಡದಲ್ಲಿ ಪತ್ತೆಯಾಗಿವೆ. ಈ ದುರ್ಘಟನೆ ಆತ್ಮಹತ್ಯೆಯೋ ಅಥವಾ ಕೊಲೆಯೋ ಎಂಬ ಅನುಮಾನಗಳು ಮೂಡಿದ್ದು, ಪ್ರಕರಣ ಗಂಭೀರ ತಿರುವು ಪಡೆದುಕೊಂಡಿದೆ.
ಘಟನೆ ಕುರಿತು ಮಾಹಿತಿ ಪಡೆದ ಸೂರ್ಯ ನಗರ ಪೊಲೀಸ್ ಠಾಣೆ
ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ ಹಲವು ಅನುಮಾನಾಸ್ಪದ ಅಂಶಗಳು ಕಂಡುಬಂದಿದ್ದು, ಸಾವಿನ ನಿಖರ ಕಾರಣ ಪತ್ತೆ ಮಾಡಲು ಮುಂದಿನ ತನಿಖೆ ಮುಂದುವರೆದಿದೆ.
ಗ್ರಾಮದಲ್ಲಿ ಈ ಘಟನೆ ಭಾರೀ ಚರ್ಚೆಗೆ ಕಾರಣವಾಗಿದ್ದು, ಕುಟುಂಬದ ಹಿನ್ನೆಲೆ ಮತ್ತು ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಪೊಲೀಸರು ಮಾಹಿತಿ ಕಲೆಹಾಕುತ್ತಿದ್ದಾರೆ.

