ಲಿವ್ ಇನ್ ಸಂಬಂಧದಲ್ಲಿದ್ದ ಯುವಕ ಆತ್ಮಹತ್ಯೆ – ಮಹಿಳೆ ನಾಪತ್ತೆ

ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿರುವ ಘಟನೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ನಡೆದಿದೆ.

ಚಿತ್ರದುರ್ಗ ಮೂಲದ 28 ವರ್ಷದ ತಿಪ್ಪೇಸ್ವಾಮಿ ಮೃತ ಯುವಕ ಎಂದು ಗುರುತಿಸಲಾಗಿದೆ. ದಾವಣಗೆರೆ ಮೂಲದ ಮಹಿಳೆ ಹಾಗೂ ತಿಪ್ಪೇಸ್ವಾಮಿ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಇನ್‌ಸ್ಟಾಗ್ರಾಂ ಮೂಲಕ ಪರಿಚಯವಾಗಿ ಬಳಿಕ ಪ್ರೀತಿಗೆ ಬಿದ್ದಿದ್ದರು.

ಮಹಿಳೆಗೆ ಈಗಾಗಲೇ ಮದುವೆಯಾಗಿದ್ದು, ಇಬ್ಬರು ಮಕ್ಕಳಿದ್ದಾರೆ ಎನ್ನಲಾಗಿದೆ. ಸದ್ಯ ಪತಿ ಹಾಗೂ ಮಕ್ಕಳನ್ನು ಬಿಟ್ಟು ಬಂದಿದ್ದ ಮಹಿಳೆ, ಕಳೆದ ಎರಡು ತಿಂಗಳ ಹಿಂದೆ ಬೆಂಗಳೂರಿನ ಶ್ರೀಗಂಧ ನಗರದಲ್ಲಿ ಯುವಕನ ಜೊತೆ ಬಾಡಿಗೆ ಮನೆ ಪಡೆದು ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿ ವಾಸಿಸುತ್ತಿದ್ದರು. ಮನೆ ಮಾಲೀಕರಿಗೆ ಗಂಡ-ಹೆಂಡತಿ ಎಂದು ಹೇಳಿ ತಿಂಗಳಿಗೆ 3 ಸಾವಿರ ರೂಪಾಯಿ ಬಾಡಿಗೆ ನೀಡಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಇತ್ತೀಚೆಗೆ ಮಹಿಳೆ ‘ನನ್ನ ಮೆಂಟೇನೆನ್ಸ್ ಆಗಲ್ಲ, ನನ್ನನ್ನು ಬಿಟ್ಟುಬಿಡು’ ಎಂದು ಯುವಕನಿಗೆ ಕಿರುಕುಳ ನೀಡುತ್ತಿದ್ದಳು ಎನ್ನಲಾಗಿದೆ. ಇದರಿಂದ ಮನನೊಂದ ತಿಪ್ಪೇಸ್ವಾಮಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಘಟನೆ ಸಂಬಂಧ ರಾಜಗೋಪಾಲನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಯುವಕನ ಸಾವಿಗೆ ಮಹಿಳೆಯೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಸದ್ಯ ಮಹಿಳೆ ನಾಪತ್ತೆಯಾಗಿದ್ದು, ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *