
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಬೀರೂರು ಪಟ್ಟಣದಲ್ಲಿ ದುರಂತ ಘಟನೆ ನಡೆದಿದೆ. ಬೀರೂರು ಠಾಣೆಯ ಸಬ್ ಇನ್ಸ್‌ಪೆಕ್ಟರ್ ತಿಪ್ಪೇಶ್ ಅವರ ಪತ್ನಿ ಪದ್ಮ (34) ಕೌಟುಂಬಿಕ ಕಲಹದಿಂದ ಬೇಸತ್ತು ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.
ಮೂಲಗಳ ಪ್ರಕಾರ, ತಿಪ್ಪೇಶ್ ಮತ್ತು ಪದ್ಮ ಪ್ರೀತಿಸಿ ಮದುವೆಯಾಗಿದ್ದು, ಇಬ್ಬರಿಗೆ ಇಬ್ಬರು ಮಕ್ಕಳಿದ್ದಾರೆ. ಆದರೆ ಇತ್ತೀಚೆಗೆ ದಂಪತಿಯ ನಡುವೆ ಕೌಟುಂಬಿಕ ಕಲಹ ಹೆಚ್ಚಾಗಿ ಕಾಣಿಸಿಕೊಂಡಿತ್ತು ಎನ್ನಲಾಗಿದೆ.
ಮಂಗಳವಾರ ರಾತ್ರಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಪದ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಬೆಳಕಿಗೆ ಬಂದ ಬಳಿಕ ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ಮೃತದೇಹವನ್ನು ಪರಿಶೀಲನೆಗಾಗಿ ಆಸ್ಪತ್ರೆಗೆ ಸಾಗಿಸಲು ಸಿದ್ಧತೆ ನಡೆದಿದೆ.
ಪೊಲೀಸರು ಪದ್ಮ ಅವರ ಕುಟುಂಬಸ್ಥರ ಆಗಮನಕ್ಕಾಗಿ ಕಾಯುತ್ತಿದ್ದಾರೆ. ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡುವ ಸಾಧ್ಯತೆ ಇದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

