
ಕೊಪ್ಪಳದಲ್ಲಿ ಮತ್ತೊಮ್ಮೆ ಲವ್ ಜಿಹಾದ್ ಶಂಕೆ ಮೂಡಿಸಿರುವ ಘಟನೆ ಭಾರೀ ಚರ್ಚೆಗೆ ಗ್ರಾಸವಾಗಿದೆ. ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಹಿಂದೂ ಬಾಲಕಿ ಹಾಗೂ ಮುಸ್ಲಿಂ ಯುವಕ ಸಿಕ್ಕಿಬಿದ್ದ ಘಟನೆ ಇದೀಗ ರಾಜಕೀಯ ಮತ್ತು ಸಾಮಾಜಿಕ ವಲಯದಲ್ಲಿ ತೀವ್ರ ವಿವಾದಕ್ಕೆ ಕಾರಣವಾಗಿದೆ.
ಕೊಪ್ಪಳ ನಗರದ ಖಾಸಗಿ ಹೋಟೆಲ್‌ನಲ್ಲಿ ಅಪ್ರಾಪ್ತ ಬಾಲಕಿ ಜೊತೆ ಸಮೀರ್ ಎಂಬ ಮುಸ್ಲಿಂ ಯುವಕ ಇದ್ದಾನೆ ಎಂಬ ಮಾಹಿತಿ ತಿಳಿದ ಭಜರಂಗದಳ ಕಾರ್ಯಕರ್ತರು ಸ್ಥಳಕ್ಕೆ ಆಗಮಿಸಿ ಪ್ರಶ್ನಿಸಿದ್ದಾರೆ. ಈ ವೇಳೆ ಯುವಕ ಮತ್ತು ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು ಬಳಿಕ ಹಲ್ಲೆ ನಡೆದಿದೆ ಎನ್ನಲಾಗಿದೆ.
ಈ ಸಂಬಂಧ ಸಮೀರ್ ಕೊಪ್ಪಳ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ದೂರಿನ ಆಧಾರದ ಮೇಲೆ ಪೊಲೀಸರು 8 ಭಜರಂಗದಳ ಕಾರ್ಯಕರ್ತರನ್ನು ಬಂಧಿಸಿದ್ದಾರೆ. ಘಟನೆಯ ಬಗ್ಗೆ ಅಪ್ರಾಪ್ತ ಬಾಲಕಿಯ ಪೋಷಕರು ಆತಂಕ ವ್ಯಕ್ತಪಡಿಸಿದ್ದಾರೆ.
ಪ್ರಕರಣದ ಗಂಭೀರತೆಯನ್ನು ಗಮನಿಸಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ರಾಮ್ ಅರಸಿದ್ದಿ ಠಾಣೆಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು. ಘಟನೆ ತಿಳಿಯುತ್ತಿದ್ದಂತೆಯೇ ಬಿಜೆಪಿ ನಾಯಕರು ಹಾಗೂ ನೂರಾರು ಹಿಂದೂ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದರು.
“ಅಪ್ರಾಪ್ತ ಬಾಲಕಿಯನ್ನು ಪುಸಲಾಯಿಸಿ ಕರೆದುಕೊಂಡು ಬಂದ ಆರೋಪಿಯನ್ನು ಬಂಧಿಸದೇ, ಪ್ರಶ್ನಿಸಿದ ಕಾರ್ಯಕರ್ತರ ವಿರುದ್ಧ ಮಾತ್ರ ಕ್ರಮ ಕೈಗೊಳ್ಳಲಾಗಿದೆ” ಎಂದು ಬಿಜೆಪಿ ಮುಖಂಡರು ಪೊಲೀಸರ ವಿರುದ್ಧ ಆರೋಪಿಸಿದರು.
ಕೊಪ್ಪಳ ಜಿಲ್ಲೆಯಲ್ಲಿ ಇಂತಹ ಪ್ರಕರಣಗಳು ಮರುಕಳಿಸುತ್ತಿರುವುದರಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ಪ್ರಕರಣದ ತನಿಖೆಯನ್ನು ಪೊಲೀಸರು ಮುಂದುವರೆಸಿದ್ದಾರೆ.

