ಕುಂದಾಪುರ ದೇವಸ್ಥಾನ ಕಳವು ಪ್ರಕರಣ – ಇಬ್ಬರು ಆರೋಪಿಗಳ ಬಂಧನ

ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಆಜ್ರಿ ಗ್ರಾಮದ ಉಮಾಮಹೇಶ್ವರ ದೇವಸ್ಥಾನದಲ್ಲಿ ನಡೆದ ಕಾಣಿಕೆ ಹುಂಡಿ ಕಳವು ಪ್ರಕರಣದಲ್ಲಿ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಏಪ್ರಿಲ್ 20ರಂದು ಬೆಳಗ್ಗೆ ನಡೆದ ಈ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿ ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೆಲ್ಮೆಟ್ ಧರಿಸಿದ ವ್ಯಕ್ತಿಯೊಬ್ಬ ದೇವಸ್ಥಾನದ ಹೊರ ಪೌಳಿಗೆ ಬಂದು ಹುಂಡಿಯನ್ನು ಕಳ್ಳತನ ಮಾಡಿಕೊಂಡು ಹೋಗಿದ್ದ ದೃಶ್ಯಗಳು ಗಮನಕ್ಕೆ ಬಂದಿದ್ದವು.

ಪ್ರಕರಣವನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸರು ತನಿಖೆ ನಡೆಸಿ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರನ್ನು ಕಮಲಶಿಲೆ ಗ್ರಾಮದ ಸಂದೀಪ ಆಚಾರಿ (28) ಮತ್ತು ಕೊಪ್ಪಳ ಜಿಲ್ಲೆಯ ಮುತ್ತಪ್ಪ ಶರಣಪ್ಪ ವಾಲಿಕರ್ (40) ಎಂದು ಗುರುತಿಸಲಾಗಿದೆ.

ಇವರನ್ನು ಬಾಗಲಕೋಟೆ ಜಿಲ್ಲೆಯ ಇಳಕಲ್‌ನಲ್ಲಿ ಬಂಧಿಸಲಾಗಿದೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಬೈಕ್, ಮೂರು ಮೊಬೈಲ್ ಫೋನ್‌ಗಳು ಮತ್ತು ಕಳವು ಮಾಡಲಾದ ದೇವಸ್ಥಾನದ ಕಾಣಿಕೆ ಹುಂಡಿ ಸೇರಿದಂತೆ ಸುಮಾರು 1.50 ಲಕ್ಷ ರೂಪಾಯಿ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆ ಮುಂದುವರಿದಿದೆ

Leave a Reply

Your email address will not be published. Required fields are marked *