ಮಂಡ್ಯ ಜಿಲ್ಲೆಯಲ್ಲಿ ಬಾಲಕಾರ್ಮಿಕರ ವಿರುದ್ಧ ಆಪರೇಷನ್: 40 ಪ್ರಕರಣ ಪತ್ತೆ

ಮಂಡ್ಯ, ಮೇ 06: ಸರ್ಕಾರದ ಕಠಿಣ ನಿಯಮಗಳ ನಡುವೆಯೂ ಮಂಡ್ಯ ಜಿಲ್ಲೆಯಲ್ಲಿ ಕಳೆದ ಒಂದು ವರ್ಷದಲ್ಲಿ 40 ಬಾಲಕಾರ್ಮಿಕರನ್ನು ಗುರುತಿಸಲಾಗಿದ್ದು, ಈ ಸಂಬಂಧ 14 ಎಫ್‌ಐಆರ್‌ಗಳು ದಾಖಲಾಗಿವೆ. ಜಿಲ್ಲಾಧಿಕಾರಿ ಕುಮಾರ್ ಈ ಕುರಿತು ಮಾಹಿತಿ ನೀಡಿದ್ದಾರೆ.

ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಮಿತಿ ಹಾಗೂ ಬಾಲಕಾರ್ಮಿಕ ನಿರ್ಮೂಲನೆ ಕಾರ್ಯಪಡೆ ಸಭೆಯಲ್ಲಿ ಮಾತನಾಡಿದ ಅವರು, 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಗ್ಯಾರೇಜ್, ಹೋಟೆಲ್ ಹಾಗೂ ಕಾರ್ಖಾನೆಗಳಲ್ಲಿ ಕೆಲಸಕ್ಕೆ ನೇಮಿಸಿಕೊಳ್ಳುವುದು ಗಂಭೀರ ಅಪರಾಧ ಎಂದು ಎಚ್ಚರಿಸಿದರು.

2025ರ ಏಪ್ರಿಲ್‌ನಿಂದ 2026ರ ಮಾರ್ಚ್‌ವರೆಗೆ ಜಿಲ್ಲೆಯಲ್ಲಿ ಒಟ್ಟು 951 ತಪಾಸಣೆಗಳನ್ನು ನಡೆಸಲಾಗಿದ್ದು, ಈ ವೇಳೆ 40 ಬಾಲಕಾರ್ಮಿಕರನ್ನು ಪತ್ತೆ ಹಚ್ಚಲಾಗಿದೆ. ಈ ಪೈಕಿ 14 ಪ್ರಕರಣಗಳಲ್ಲಿ ಎಫ್‌ಐಆರ್ ದಾಖಲಾಗಿದ್ದು, ಉಳಿದ 26 ಪ್ರಕರಣಗಳು ಜೆಎಂಎಫ್‌ಸಿ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

ಬಾಲಕಾರ್ಮಿಕ ನಿರ್ಮೂಲನೆಗಾಗಿ ತಾಲೂಕು ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಹೆಚ್ಚಿಸಬೇಕು. ಮಕ್ಕಳಿಗೆ ಶಿಕ್ಷಣ, ಸಲಹೆ ಹಾಗೂ ಕೌಶಲ್ಯಾಭಿವೃದ್ಧಿ ತರಬೇತಿ ಒದಗಿಸಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಇದೇ ವೇಳೆ ಅಧಿಕಾರಿಗಳು 2025-26ರಲ್ಲಿ ಬಾಲಕಾರ್ಮಿಕ ಹಾಗೂ ಬಾಲ್ಯವಿವಾಹ ನಿರ್ಮೂಲನೆ ಕುರಿತು 9 ಬೀದಿ ನಾಟಕಗಳು, 7 ಸಾವಿರ ಪಾಂಪ್ಲೆಟ್ ವಿತರಣೆ, 22 ಗೋಡೆ ಬರಹಗಳು ಹಾಗೂ 6 ಗ್ರಾಮ ಪಂಚಾಯಿತಿಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಿರುವ ಮಾಹಿತಿ ನೀಡಿದರು.

ಬಾಲಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ 1986ರ ಪ್ರಕಾರ 14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದು ಅಪರಾಧವಾಗಿದೆ. ತಪ್ಪಿತಸ್ಥರಿಗೆ 6 ತಿಂಗಳಿಂದ 2 ವರ್ಷಗಳವರೆಗೆ ಜೈಲು ಶಿಕ್ಷೆ ಹಾಗೂ ₹20 ಸಾವಿರದಿಂದ ₹50 ಸಾವಿರದವರೆಗೆ ದಂಡ ವಿಧಿಸುವ ಅವಕಾಶವಿದೆ.

Leave a Reply

Your email address will not be published. Required fields are marked *