ಪರಪ್ಪನ ಅಗ್ರಹಾರ ಜೈಲಿನಲ್ಲಿ ಬಯೋಮೆಟ್ರಿಕ್ ವ್ಯವಸ್ಥೆ ಜಾರಿ – 2.25 ಕೋಟಿ ವೆಚ್ಚ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಹೊಸ ಭದ್ರತಾ ವ್ಯವಸ್ಥೆಯನ್ನು ಜಾರಿಗೆ ತರಲಾಗಿದೆ. ಕೈದಿಗಳ ಮೇಲೆ ಇನ್ನಷ್ಟು ಕಟ್ಟುನಿಟ್ಟಿನ ನಿಗಾವಹಿಸಲು ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ.

ಈ ಯೋಜನೆಗೆ ಕಾರಾಗೃಹ ಇಲಾಖೆ 2.25 ಕೋಟಿ ರೂಪಾಯಿ ವೆಚ್ಚ ಮಾಡಿದೆ. ಇದಕ್ಕೂ ಮೊದಲು ಜೈಲಿನಲ್ಲಿ ಎಐ ಕ್ಯಾಮೆರಾ ಬಳಸಿ ಕೈದಿಗಳ ಚಟುವಟಿಕೆಗಳ ಮೇಲೆ ನಿಗಾವಹಿಸಲಾಗುತ್ತಿತ್ತು. ಜೊತೆಗೆ ಡಿಜಿಟಲ್ ಟೋಕನ್ ವ್ಯವಸ್ಥೆ ಹಾಗೂ ಡಿಜಿಟಲ್ ಟ್ರ್ಯಾಕಿಂಗ್ ವ್ಯವಸ್ಥೆಯನ್ನೂ ಜಾರಿಗೆ ತರಲಾಗಿತ್ತು.

ಇದೀಗ ಭದ್ರತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಬಯೋಮೆಟ್ರಿಕ್ ವ್ಯವಸ್ಥೆ ಅಳವಡಿಸಲಾಗಿದೆ. ಜೈಲಿನ ಪ್ರತಿ ಬ್ಯಾರಕ್, ಪ್ರಮುಖ ಪ್ರದೇಶಗಳು ಸೇರಿದಂತೆ ಎಲ್ಲೆಡೆ ಈ ವ್ಯವಸ್ಥೆ ಅಳವಡಿಸಲಾಗಿದೆ.

ಈ ಹೊಸ ವ್ಯವಸ್ಥೆಯಿಂದ ಕೈದಿಗಳ ಚಲನವಲನಗಳ ಮೇಲೆ ಕಠಿಣ ನಿಗಾ ವಹಿಸಲು ಸಾಧ್ಯವಾಗಲಿದೆ. ಜೊತೆಗೆ ಮೊಬೈಲ್ ಫೋನ್ ಹಾಗೂ ನಿಷೇಧಿತ ವಸ್ತುಗಳ ಬಳಕೆಯನ್ನು ತಡೆಯಲು ಸಹಾಯಕವಾಗಲಿದೆ.

ಅಕ್ರಮ ಚಟುವಟಿಕೆಗಳನ್ನು ಸಂಪೂರ್ಣವಾಗಿ ನಿಯಂತ್ರಿಸುವುದು ಈ ಕ್ರಮದ ಪ್ರಮುಖ ಉದ್ದೇಶವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜೈಲಿನಲ್ಲಿ ಮುಂದಿನ ದಿನಗಳಲ್ಲಿ ಇನ್ನಷ್ಟು ಕಟ್ಟುನಿಟ್ಟಿನ ಬದಲಾವಣೆಗಳು ಆಗುವ ಸಾಧ್ಯತೆಯಿದೆ.

Leave a Reply

Your email address will not be published. Required fields are marked *