
ತುಮಕೂರಿನಲ್ಲಿ ಹೆಚ್ಚಾಯ್ತು ಹಕ್ಕಿ ಜ್ವರದ ಭೀತಿ: 54ಕ್ಕೂ ಹೆಚ್ಚು ನವಿಲುಗಳ ಸಾವು!
ತುಮಕೂರು ಜಿಲ್ಲೆಯಲ್ಲಿ ಹಕ್ಕಿ ಜ್ವರದ ಭೀತಿ ದಿನದಿಂದ ದಿನಕ್ಕೆ ತೀವ್ರವಾಗುತ್ತಿದೆ. ಕಳೆದ ಒಂದು ತಿಂಗಳ ಅವಧಿಯಲ್ಲಿ ಜಿಲ್ಲೆಯಲ್ಲಿ 54ಕ್ಕೂ ಹೆಚ್ಚು ನವಿಲುಗಳು ಸಾವನ್ನಪ್ಪಿರುವುದು ಆತಂಕ ಹೆಚ್ಚಿಸಿದೆ. ಈಗಾಗಲೇ ಕೆಲವು ನವಿಲುಗಳ ಸಾವಿಗೆ ಹಕ್ಕಿ ಜ್ವರವೇ ಕಾರಣ ಎಂಬುದು ಲ್ಯಾಬ್ ವರದಿಯಲ್ಲಿ ದೃಢಪಟ್ಟಿದೆ.
ತುಮಕೂರು ತಾಲೂಕಿನ ಹಲವು ಭಾಗಗಳಲ್ಲಿ ನವಿಲುಗಳು ನಿಗೂಢವಾಗಿ ಸಾವನ್ನಪ್ಪುತ್ತಿದ್ದು, ಇದೀಗ ಕುಣಿಗಲ್‌ನಲ್ಲಿಯೂ ನವಿಲಿನ ಕಳೆಬರ ಪತ್ತೆಯಾಗಿದೆ. ಇದರಿಂದ ಹಕ್ಕಿ ಜ್ವರ ಜಿಲ್ಲೆಯ ಇತರೆ ಭಾಗಗಳಿಗೂ ವ್ಯಾಪಿಸುತ್ತಿದೆಯೇ ಎಂಬ ಅನುಮಾನ ಮೂಡಿದೆ.
ಇದಕ್ಕೂ ಮೊದಲು ಜಿಲ್ಲೆಯಲ್ಲಿ ಸುಮಾರು 30ಕ್ಕೂ ಹೆಚ್ಚು ಕೋಳಿಗಳು ಮೃತಪಟ್ಟಿದ್ದವು. ಹಕ್ಕಿ ಜ್ವರದ ಶಂಕೆಯಲ್ಲಿ ಕೋಳಿಗಳ ಸ್ಯಾಂಪಲ್‌ಗಳನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಆದರೆ ಬೊಮ್ಮನಹಳ್ಳಿ ಕೋಳಿ ಫಾರಂನ ವೈದ್ಯಕೀಯ ವರದಿ ನೆಗೆಟಿವ್ ಬಂದಿರುವುದು ಸ್ವಲ್ಪ ಮಟ್ಟಿಗೆ ಸಮಾಧಾನ ತಂದಿದೆ.
ನವಿಲುಗಳ ಸರಣಿ ಸಾವಿನ ಹಿನ್ನೆಲೆಯಲ್ಲಿ ಪಶುಸಂಗೋಪನಾ ಇಲಾಖೆ ಜಿಲ್ಲೆಯಲ್ಲಿ ಹೈ ಅಲರ್ಟ್ ಘೋಷಿಸಿದೆ. ಹಕ್ಕಿಗಳ ಚಲನವಲನದ ಮೇಲೆ ನಿಗಾ ಇಡಲು ಹಾಗೂ ಯಾವುದೇ ಹಕ್ಕಿ ಅಥವಾ ಕಾಡುಪ್ರಾಣಿಗಳ ಸಾವು ಕಂಡುಬಂದರೆ ತಕ್ಷಣ ಮಾಹಿತಿ ನೀಡಲು ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಕುಣಿಗಲ್‌ನಲ್ಲಿ ಮತ್ತೆ ನವಿಲುಗಳು ಸಾವನ್ನಪ್ಪಿದರೆ ಕೂಡಲೇ ಸ್ಯಾಂಪಲ್‌ಗಳನ್ನು ಲ್ಯಾಬ್ ಪರೀಕ್ಷೆಗೆ ಕಳುಹಿಸಲು ಇಲಾಖೆ ಸಿದ್ಧತೆ ನಡೆಸಿದೆ. ಸಾರ್ವಜನಿಕರು ಆತಂಕಕ್ಕೊಳಗಾಗದೇ ಎಚ್ಚರಿಕೆಯಿಂದ ಇರಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ.

